ಹಳಿಯಾಳ: ಜಿಲ್ಲೆಯಾದ್ಯಂತ ನಿರಂತರ ಮಳೆ ಬೀಳುತ್ತಿದೆ. ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ. ಬಡವರ ಬಗ್ಗೆ ವಿಶೇಷ ಕಾಳಜಿ ವಹಿಸಿ ಎಂದು ಕಂದಾಯ ಅಧಿಕಾರಿಗಳಿಗೆ ಕಂದಾಯ ಹಾಗೂ ಕೌಶಲಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಸೂಚಿಸಿದರು.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹಳಿಯಾಳಕ್ಕೆ ಭೇಟಿ ನೀಡಿದ ಅವರು, ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಕಾಂಗ್ರೆಸ್‌ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ
ಮಾತನಾಡಿದರು.

ನಂತರ ದಂಪತಿ ಸಮೇತ ತುಳಜಾಭವಾನಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಹೊಸೂರ ಗಲ್ಲಿಯಲ್ಲಿ ಮುಸ್ಲಿಂ ಸಮುದಾಯದವರು ಏರ್ಪಡಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗಿಯಾಗಿ ರಂಜಾನ್ ಹಬ್ಬದ ಶುಭಾಶಯ ಕೋರಿದರು.